ದರ್ಶನ್ಗಿಲ್ಲ ಒಂದು ವರ್ಷ ಜಾಮೀನು ಭಾಗ್ಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಒಂದು ವರ್ಷ ಜಾಮೀನು ಭಾಗ್ಯ ಇಲ್ಲ. ಮಧ್ಯಂತರ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜಾಮೀನು ನೀಡಲು ನಿರಾಕರಿಸಿದ್ದು, ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಜೊತೆಗೆ ಮುಂದಿನ ಒಂದು ವರ್ಷದವರೆಗೆ ದರ್ಶನ್ ಯಾವುದೇ ಜಾಮೀನು ಅರ್ಜಿ ಸಲ್ಲಿಸಬಾರದು. ಒಂದೊಮ್ಮೆ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳ್ಳದಿದ್ದರೆ, ಆ ಬಳಿಕ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ನ್ಯಾಯಪೀಠ ಹೇಳಿದೆ.
ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠದ ಮುಂದೆ ಈ ಅರ್ಜಿ ಬಂದಿದ್ದು, ಜೈಲಿನಲ್ಲಿ ಇತರ ಕೈದಿಗಳಿಗೆ ನೀಡಲಾಗುವಂತೆ ದರ್ಶನ್ ಅವರಿಗೂ ಎಲ್ಲಾ ಸೌಲಭ್ಯ ಒದಗಿಸುವಂತೆ ಸೂಚಿಸಿದೆ. ಜೊತೆಗೆ ಇವತ್ತಿನಿಂದಲೇ ಆದ್ಯತೆಯ ಮೇರೆಗೆ ಈ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ಹೇಳಿದೆ.



